ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್ ಹಾಕಿಬಿಡಿ.
ಆಲಿಕಲ್ಲು ಮಳೆ ಎಚ್ಚರಿಕೆ
ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.
ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.
ಬೆಂಗಳೂರಲ್ಲಿ ಸಂಜೆ ಮಳೆ
ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.
ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್ ವೇವ್
ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್ ವೇವ್ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.
ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ
ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ