ಕಲಬುರಗಿ: ಕಲಬುರಗಿಯಲ್ಲಿ ಶನಿವಾರ ವರುಣನ (Rain News) ಅಬ್ಬರ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿತ್ತು. ನಾಳೆ ಭಾನುವಾರ ಕಲಬುರಗಿಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.
ಇನ್ನು ರಾತ್ರಿ ಸುರಿದ ಧಾರಾಕಾರ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಜಾಲಹಳ್ಳಿ ಮೊರಾರ್ಜಿ ಸ್ಕೂಲ್ ಪಕ್ಕದಲ್ಲಿ ಘಟನೆ ನಡೆದಿದೆ. ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದರಿಂದ ಸಂಚಾರಕ್ಕೆ ಜನರು ಪರದಾಡಿದರು. ಶಾಲಾ ಮಕ್ಕಳು, ಶಿಕ್ಷಕರಿಗೆ ರಸ್ತೆ ಸಂಪರ್ಕ ಕಡಿತದಿಂದಾಗಿ ಅನಾನುಕೂಲ ಉಂಟಾಯಿತು.
ಮಕ್ಕಳಿಗೆ ಪಡಿತರ ಧಾನ್ಯ, ತರಕಾರಿ ಸಾಗಿಸಲು ಶಾಲಾ ಸಿಬ್ಬಂದಿ ಹೈರಾಣಾರಾದರು. ಸೇತುವೆ ಕುಸಿತದ ಕುರಿತು ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಅನ್ನುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ಆರೋಪಿಸಿದರು. ತಕ್ಷಣ ತಾತ್ಕಾಲಿಕ ಸೇತುವೆ ನಿರ್ಮಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.
ಬೆಳಗಾವಿ, ಮಹಾರಾಷ್ಟ್ರದಲ್ಲಿ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಸೇತುವೆ ಮುಳುಗಡೆಯಾಗಿದೆ. ಬ್ರಿಡ್ಜ್ ಮೇಲೆ ಒಂದು ಅಡಿಯಷ್ಟು ನೀರು ಹರಿವು ಹೆಚ್ಚಿದೆ. ಘಟಪ್ರಭಾ ನದಿಗೆ ಢವಳೇಶ್ವರ ಸೇತುವೆ ನದಿ ನಿರ್ಮಿಸಲಾಗಿದೆ. ಇತ್ತ ನೀರಲ್ಲೇ ಮಹಾಲಿಂಗಪುರ ಪಟ್ಟಣಕ್ಕೆ ಜನರು ಸಂಚಾರಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಒಂದೊಂದೆ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಳ್ಳುತ್ತಿದೆ.
ಇದನ್ನೂ ಓದಿ: Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ
ತಗ್ಗಿದ ಮಳೆ ಅಬ್ಬರ
ನಾಳೆ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳು ಭಾರೀ ಮಳೆಅಥವಾ ಅದಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗಾಳಿ ವೇಗ 40ಕಿ.ಮೀ
ಇನ್ನು ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಆಗಾಗ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ