Site icon Vistara News

Karnataka Weather : ಬೆಂಗಳೂರು ಜತೆಗೆ ಉತ್ತರ ಕನ್ನಡ ಜಿಲ್ಲೆಗೆ ಇಂದು ಭಾರಿ ಮಳೆ ಮುನ್ಸೂಚನೆ

karnataka weather Forecast

ಬೆಂಗಳೂರು: ಆ.6ರಂದು ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು (Rain News), 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಿದೆ.

ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಲಘು ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಕೋಲಾರದಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ಕೋಲಾರ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಹಾಗೂ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ದಾವಣಗೆರೆ, ವಿಜಯನಗರ ಸೇರಿದಂತೆ ಚಿಕ್ಕಬಳ್ಳಾಪುರದ ಸುತ್ತಮುತ್ತ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗದಲ್ಲೂ ವ್ಯಾಪಕ ಮಳೆ ಅಬ್ಬರ

ಮಲೆನಾಡು ಭಾಗದಲ್ಲಿ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಗಾಳಿ ಸಹಿತ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Road Accident : ಶಾಲಾ ಶಿಕ್ಷಕನ ಬಲಿ ಪಡೆದ ಸ್ಕೂಲ್‌ ವ್ಯಾನ್‌; ಒಂಟಿ ಸಲಗ ದಾಳಿಗೆ ವೃದ್ಧೆ ಸಾವು

ಮಳೆ ಬಂದರೆ ಚಿತ್ರದುರ್ಗದಲ್ಲಿ ಗುಡ್ಡ ಕುಸಿತ ಭೀತಿ

ಕೋಟೆ ನಾಡು ಚಿತ್ರದುರ್ಗದಲ್ಲಿ ಗುಡ್ಡ ಕುಸಿತದ ಭೀತಿ ಶುರುವಾಗಿದೆ. ಚಿತ್ರದುರ್ಗದ ಸುತ್ತ ಮುತ್ತಲಿನ ಗುಡ್ಡ ಕಡಿದು ಲೇಔಟ್ ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ ನಗರದ ಐಯುಡಿಪಿ ಲೇಔಟ್, ಟೀಚರ್ಸ್ ಕಾಲೋನಿ, ಧವಳಗಿರಿಯ ಬಡಾವಣೆ ಸೇರಿ ಹಲವೆಡೆ ಗುಡ್ಡ ಕಡಿತ ಉಂಟಾಗಿದೆ. ಹಣದಾಸೆಗೆ ನಗರಸಭೆ ಅಧಿಕಾರಿಗಳು ಪ್ರಕೃತಿಯ ನಾಶ ಮಾಡುತ್ತಿದ್ದಾರೆ. ಅಪಾಯದ ಮಟ್ಟಕ್ಕೆ ಗುಡ್ಡ ಕಡಿಯುತ್ತಿರುವುದಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ. ಮಳೆ ಬಂದ ಸಮಯದಲ್ಲಿ ಗುಡ್ಡದಲ್ಲಿ ಮಣ್ಣಿನ ಸವೆತ ಉಂಟಾಗುತ್ತಿದೆ. ಹೀಗೆ ಆದರೆ ಕೇರಳದ ರೀತಿಯಲ್ಲಿ ನಮಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಕಂಗಲಾದರು.

ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ

ಭೀಮಾನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್‌ನಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಭೀಮಾನದಿಗೆ ಒಳಹರಿವು ಹೆಚ್ಚಳ ಗೊಂಡಿದೆ. ಭೀಮಾನದಿ ಅಬ್ಬರಕ್ಕೆ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version