ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಮುಂಜಾನೆ ಹಾಗೂ ಸಂಜೆ ಸಮಯ ತಂಪು ಗಾಳಿ ಬೀಸಿದ್ದರೆ, ಮಧ್ಯಾಹ್ನದಂದು ಉರಿ ಬಿಸಿಲು ಸುಡಲಿದೆ.
ತಾಪಮಾನದ ಮುನ್ಸೂಚನೆ
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ. ಕರಾವಳಿಯ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು
ವಿಜಯಪುರದಲ್ಲಿ ಇಳಿಕೆಗೊಂಡ ಕನಿಷ್ಠ ತಾಪಮಾನ
ರಾಜ್ಯಾದ್ಯಂತ ಸೋಮವಾರ ಒಣ ಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಕನಿಷ್ಠ ಉಷ್ಣಾಂಶ 13.9 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 15.1 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರಿನಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 37.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಚಿಕ್ಕಮಗಳೂರು, ಧಾರವಾಡ, ಹಾಸನ ಮತ್ತು ವಿಜಯಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್‌ನಿಂದ 16 ಡಿಗ್ರಿ ಸೆಲ್ಸಿಯಸ್ ಇತ್ತು. ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ನಿಂದ 41 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ