ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಬಿಸಿಲು ತನ್ನ ಪ್ರಭಾವವನ್ನು ಹೆಚ್ಚಳ ಮಾಡಿಕೊಳ್ಳುತ್ತಿದೆ. ಗುರುವಾರ ಮತ್ತು ಶುಕ್ರವಾರ ಗರಿಷ್ಠ ತಾಪಮಾನದಲ್ಲಿ ಏರಿಕೆ ಇರಲಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಹೊನ್ನಾವರ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಕಲಬುರಗಿ, ಬೆಳಗಾವಿಯಲ್ಲಿ 35 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ.
ಹೀಗಾಗಿ ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಒಣ ಹವೆ (Dry Weather) ಇರಲಿದೆ. ಜತೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಲ್ಲಿ ಬಿಸಿಲು ಜಾಸ್ತಿ
ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಫೆಬ್ರವರಿ 22ರಿಂದ 26ರವರೆಗೆ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದ್ದರೆ, ಗರಿಷ್ಠ ಉಷ್ಣಾಂಶ 32 – 33 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹೀಗಾಗಿ ಬೆಂಗಳೂರಿನಲ್ಲಿ ತಂಪಿನ ವಾತಾವರಣ ಈಗ ಮರೀಚಿಕೆಯಾಗಿದೆ.
ಮಲೆನಾಡಲ್ಲಿ ಭಾರಿ ಸೆಕೆ
ಮಲೆನಾಡು ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಇರಲಿದೆ. ಶಿವಮೊಗ್ಗದಲ್ಲಿ ಫೆ. 21ರಿಂದ 28ರವರೆಗಿನ ವಾತಾವರಣವನ್ನು ನೋಡುವುದಾದರೆ, ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಾಣಲಿದೆ. ಅಲ್ಲಿ 33 ಡಿಗ್ರಿ ಸೆಲ್ಸಿಯಸ್‌ನಿಂದ 36 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಕರಾವಳಿಗೆ ಬಿಸಿಲಿನ ಬಳುವಳಿ
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹೆಚ್ಚಾಗಿ ಇರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಇರಲಿದೆ.
ದಕ್ಷಿಣ ಒಳನಾಡಿನ ವಾತಾವರಣ ಹೇಗಿರಲಿದೆ?
ದಕ್ಷಿಣ ಒಳನಾಡಿನಲ್ಲಿಯೂ ಬಿಸಿಲಿನ ಪ್ರಮಾಣ ಹೆಚ್ಚಾಗಿ ಇರಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ, ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಇಲ್ಲೆಲ್ಲ ಮೈಸುಡುವ ಬಿಸಿಲು ಇರಲಿದ್ದು, ಮನೆಯಲ್ಲಿದ್ದರೂ ಜನ ಬೆವರು ಸುರಿಸುವ ಪರಿಸ್ಥಿತಿ ತಲೆದೋರಲಿದೆ.
ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳ
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 33 ಡಿ.ಸೆ -19 ಡಿ.ಸೆ
ಮಂಗಳೂರು: 35 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 20 ಡಿ.ಸೆ
ಗದಗ: 34 ಡಿ.ಸೆ – 18 ಡಿ.ಸೆ
ಹೊನ್ನಾವರ: 33 ಡಿ.ಸೆ- 21 ಡಿ.ಸೆ
ಕಲಬುರಗಿ: 37 ಡಿ.ಸೆ – 22 ಡಿ.ಸೆ
ಬೆಳಗಾವಿ: 35 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 21 ಡಿ.ಸೆ