ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಇನ್ನು ಆರು ದಿನಗಳ ಕಾಲ ಭಾರಿ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather report) ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಸುಳಿಗಾಳಿ ಪ್ರಭಾವದಿಂದಾಗಿ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪರಿಣಾಮ ರಾಜ್ಯದ ಮೇಲಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ. ಸುಳಿಗಾಳಿಯ ಆಂಧ್ರಪ್ರದೇಶ ಹಾಗೂ ಒಡಿಶಾ ಮೂಲಕ ಬರಲಿದ್ದು, ಇದರ ತೀವ್ರತೆಯಿಂದ ಜೋರು ಮಳೆ ಸುರಿಯಲಿದೆ ಎಂದು ಹೇಳಲಾಗಿದೆ.
ಸೆ.13ರಿಂದ ಮುಂದಿನ 6 ದಿನಗಳು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿಯೇ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಒಳನಾಡಲ್ಲಿ ಮೂರು ದಿನಗಳು ಭಾರಿ ಮಳೆಯಾಗಲಿದ್ದು, ನಂತರ ಸಾಧಾರಣವಾಗಿರಲಿದೆ. ಬೆಂಗಳೂರು ಸುತ್ತಮುತ್ತ ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗಲಿದೆ. ಹೆಚ್ಚಿನ ಸಮಯದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇನ್ನೆರಡು ದಿನ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ
ಕರಾವಳಿ ಜಿಲ್ಲೆಯಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಬಿರುಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.
ಬೆಂಗಳೂರಿನ ಅಲ್ಲಲ್ಲಿ ಮಳೆ
ದಕ್ಷಿಣ ಒಳನಾಡಿನ ರಾಮನಗರ, ಮಂಡ್ಯ ಸೇರಿದಂತೆ ಬೆಂಗಳೂರಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬೀದರ್ ಹಾಗೂ ಮಲೆನಾಡಿನ ಕೊಡಗು ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯಾದ್ಯಂತ ನೈರುತ್ಯ ಮುಂಗಾರು ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ದುರ್ಬಲಗೊಂಡಿದ್ದರೆ, ಉತ್ತರ ಒಳನಾಡಲ್ಲಿ ಸಾಮಾನ್ಯವಾಗಿದೆ. ರಾಜ್ಯದಲ್ಲಿ ಜೂನ್ 1ರಿಂದ ಸೆ.12ರವರೆಗೆ ಮಳೆ ಕೊರತೆಯು ಶೇ.19ರಷ್ಟಿದೆ. ಇದರಿಂದ ತೀವ್ರ ಸಮಸ್ಯೆಯಾಗಿದೆ. ಈಗಾಗಲೇ ರಾಜ್ಯದಲ್ಲಿ ಬರ ತಾಲೂಕುಗಳ ಘೋಷಣೆಗೆ ಸಿದ್ಧತೆಗಳು ನಡೆದಿವೆ. ಈಗಿನ ಅಂದಾಜಿನ ಪ್ರಕಾರ 130ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಇನ್ನೂ ಹೆಚ್ಚುವರಿ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, ಮುಂದಿನ ದಿನಗಳಲ್ಲಿ ಮಳೆ ಪರಿಸ್ಥಿತಿ ಹೀಗೇ ಮುಂದುವರಿದರೆ ಕುಡಿಯುವ ನೀರಿಗೂ ಪರದಾಟ ನಡೆಸುವ ಪರಿಸ್ಥಿತಿ ಬಂದೊದಗಬಹುದು ಎಂಬ ಆತಂಕ ಎದುರಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ