ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ಸುರಿದ ಮಳೆ(Weather Updates)ಗೆ ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ ರಾತ್ರಿ ಇಡೀ ಹಲವಡೆ ಭಾರೀ ಮಳೆಯಾಗಿದ್ದು, ಮುಂಗಾರು ಆರಂಭದಲ್ಲೇ ಪ್ರವಾಹ ಸ್ಥಿತಿ ಎದುರಾಗಿದೆ. ಇನ್ನು ರಸ್ತೆ, ಮನೆಗಳಿಗೆ ನುಗ್ಗಿದ ನೀರು ಒಂದೇ ದಿನಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇನ್ನು ಭಾರೀ ಗಾಳಿ ಮಳೆಗೆ ಮರಗಳು ರಸ್ತೆಗುರುಳಿದ್ದು, ಸಂಚಾರಕ್ಕೆ ಭಾರೀ ಅಡ್ಡಿಯಾಗಿತ್ತು.
ಕಳೆದ 24 ಗಂಟೆಯಲ್ಲಿ ಯಾವ ಭಾಗದಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆಯಾಗಿದೆ ಅಂತ ನೋಡೋದಾದ್ರೆ ಪೀಣ್ಯ ಇಂಡಸ್ಟ್ರಿಯಲ್ ಏರಿಯಾ 7.8ಸೆಂ.ಮೀ, ಹೊರಮಾವು 7 ಸೆಂ.ಮೀ, ವಿದ್ಯಾಪೀಠ 6.3ಸೆಂ.ಮೀ, ಹಂಪಿನಗರ 6.2ಸೆಂ.ಮೀ, ಕೊಡಿಗೆಹಳ್ಳಿ 6ಸೆಂ.ಮೀ, ಹೇರೋಹಳ್ಳಿ 5.9 ಸೆಂಮೀ, ದೊಡ್ಡನೆಕುಂದಿ 5.8ಸೆಂಮೀ, ಜಕ್ಕೂರು 5.6 ಸೆಂ.ಮೀ, ನಾಗೇನಹಳ್ಳಿ 5.3ಸೆಂ.ಮೀ, ಯಲಹಂಕಾ 5.3 ಸೆಂ.ಮೀ, RR ನಗರ 5.2 ಸೆಂ.ಮೀ ಮಳೆಯಾಗಿದೆ.
ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿತ್ತು. ಇದರಿಂದ ರೊಚ್ಚಿಗೆದ್ದ ಜನ ಬೀದಿಗಿಳಿದು ಮಳೆ ನೀರಲ್ಲೇ ನಿಂತು ರಸ್ತೆ ತಡೆದು ಬಿಬಿಎಂಪಿ ವಿರುದ್ಧ ಜನ ಪ್ರತಿಭಟನೆ ನಡೆಸಿದರು. ಸರ್ಜಾಪುರ, ರಾಜಪಾಳ್ಯ, ಮಾರತ್ತಹಳ್ಳಿ, ಯಲಹಂಕಾ ಸುತ್ತಮುತ್ತ ರಸ್ತೆಗಳು ಕೆರೆಯಂತಾಗಿದ್ದು, ಬಿಬಿಎಂಪಿ ವಿರುದ್ಧ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದರು.
ಇನ್ನು ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮುಂಗಾರು ಅಬ್ಬರ ಹೆಚ್ಚಾಗಲಿದ್ದು, ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿ ಬೀಸುವ (Karnataka weather Forecast) ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ವ್ಯಾಪಕ ಲಘುದಿಂದ ಸಾಧಾರಣ ಮಳೆ ಸಾಧ್ಯತೆ ಇದೆ. ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಯಾದಗಿರಿ, ಬೆಳಗಾವಿ, ಧಾರವಾಡ, ಗದಗದಲ್ಲಿ ಸಾಧಾರಣ ಮಳೆಯಾಗಲಿದೆ. ವಿಜಯನಗರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ:Assault Case: ಯುವತಿಯ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ!
ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.